ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಸಜೀವ ದಹನ; ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

Share with

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಟೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಸಿಎಂ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್‌ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್‌ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಎಕ್ಸ್ ಪೋಸ್ಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *