ಉಡುಪಿ: ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಫೆ.28ರಂದು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮುಖಂಡರಾದ ರಾಜೇಶ್ ಕಾವೇರಿ, ವೀಣಾ ಶೆಟ್ಟಿ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಖಂಡರಾದ ಪ್ರಖ್ಯಾತ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದು, ಕಾಂಗ್ರೆಸ್ ಭವನಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು. ಈ ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್ ಹಾಗೂ ಕಾಂಗ್ರೆಸ್ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರಿಂದ ಜಮಾವಣೆ:
ಬಿಜೆಪಿಯ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಕಾಂಗ್ರೆಸ್ ಭವನದ ಎದುರು ಜಮಾಯಿಸಿದರು. ಬಳಿಕ ಕಾಂಗ್ರೆಸ್ ಪರ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಪ್ರಖ್ಯಾತ್ ಶೆಟ್ಟಿ, ವರೋನಿಕಾ ಕರ್ನೆಲಿಯೊ ಮೊದಲಾದವರು ಉಪಸ್ಥಿತರಿದ್ದರು.