ಉಡುಪಿ: ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ ಲೋಂಬೋರ್ಡ್ ಸ್ಕೂಲ್ ಆಫ್ ನರ್ಸಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಮಾ.2ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋದಿಂದ ರಕ್ಷಿಸಲು ಹಾಗೂ ರೋಗ ನಿರೋಧಕತೆಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಪಲ್ಸ್ ಪೋಲಿಯೋ ಲಸಿಕೆ ಕುರಿತು ಅರಿವು ಮೂಡಿಸುವುದರೊಂದಿಗೆ ಅದರಿಂದ ಉಂಟಾಗುವ ಅಂಗವೈಕಲ್ಯತೆಯನ್ನು ಹಾಗೂ ಅದರ ಭೀಕರ ಪರಿಣಾಮವನ್ನು ತಡೆಗಟ್ಟುವಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಐ.ಪಿ ಗಡಾದ, ನಗರಸಭಾ ಸದಸ್ಯೆ ರಶ್ಮಿ ಭಟ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ ಜ್ಯೋಸ್ನಾ ಬಿ ಕೆ, ಡಾ ರಾಜ್ ಗೋಪಾಲ ಭಂಡಾರಿ, ಡಾ.ವಾಸುದೇವ ಉಪಸ್ಥಿತರಿದ್ದರು.