ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಏಪ್ರಿಲ್ 3ರಂದು ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆ ನೀಡಿದರು.
ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಪದ್ಮರಾಜ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಉಪಸ್ಥಿತರಿದ್ದರು.