ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಏಪ್ರಿಲ್ 18ರಂದು ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ. ಕೃಷ್ಣ ಅವರು ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ರಸ್ತೆಯನ್ನು ಏಕ ಪಥಕ್ಕೆ ಮಾರ್ಪಾಡುಗೊಳಿಸಲಾಗಿತ್ತು. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಅವರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೃಷ್ಣ ಅವರು ಉಡುಪಿ ನಗರಸಭೆ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.