ಮಂಜೇಶ್ವರ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಅಣ್ಣ ತಮ್ಮ ದೈವಗಳ ಕ್ಷೇತ್ರದ ಜಾತಿಯ ಪೂರ್ವಭಾವಿ ಯಾಗಿ ಉದ್ಯಾವರ ಸಾವಿರ ಜಮಾಅತ್ ಮಸೀದಿಗೆ ದೈವಗಳ ಭೇಟಿ ಕಾರ್ಯಕ್ರಮ ಶುಕ್ರವಾರ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿತು. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ ೮೦೦ ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂ. ಪ್ರತಿಯ ಪದ್ಧತಿಯಂತೆ ಶುಕ್ರವಾರ ಮಧ್ಯಾಹ್ನ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಜೊತೆಯಾಗಿ ಉದ್ಯಾವರ ಸಾವಿರ ಜಮಾಅತ್ ಗೆ ಭೇಟಿ ನೀಡಿದರು. ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಪ್ರಾಚೀನ ಕಾಲದಿಂದಲೇ ಆಚರಿಸಿಕೊಂಡು ಬರುತ್ತಿರುವ ಅರಸು ದೈವಗಳ ಜಮಾಅತ್ ಭೇಟಿಯು ಇಂದಿಗೂ ಹಿಂದೂ, ಮುಸ್ಲಿಂ ಭಾವೈಕ್ಯದ ಪ್ರತೀಕವಾಗಿದೆ. ಮೇಷ ಸಂಕ್ರಮಣ ಕಳೆದು ಬರುವ ಮೊದಲ ಶುಕ್ರವಾರ ಈ ಸಾಂಪ್ರದಾಯಿಕ ಭೇಟಿ ನಡೆದು ಬರುತ್ತಿದೆ. ಮಧ್ಯಾಹ್ನ ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು ೧.೩೦ರ ಹೊತ್ತಿಗೆ ಜಮಾಅತ್ ಗೆ ತಲುಪಿದವು. ಈ ವೇಳೆ ಜುಮಾ ನಮಾಜ್ ಮುಗಿಸಿ ಸಜ್ಜಾಗಿ ನಿಂತಿದ್ದ ಮಸೀದಿಯ ಆಡಳಿತ ಸಮಿತಿ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿ ಸ್ವಾಗತ ನೀಡಿದರು. ಮೇ ತಿಂಗಳು ೮ ರಿಂದ ೧೧ ರ ತನಕ ವರ‍್ಷಿಕ ಐತಿಹಾಸಿಕ ಬಂಡಿ ಉತ್ಸವ ನಡೆಯಲಿದೆ. ಮೇ ತಿಂಗಳು ೧೪ ರಂದು ಧ್ವಜ ಇಳಿಯುವುದರೊಂದಿಗೆ ಉತ್ಸವ ಕಾರ್ಯಕ್ರಮ ಸಮಾಪ್ತಿಗೊಳ್ಳಲಿದೆ.