ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರ್ಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಲ್ಪೆ ಮೀನುಗಾರ ಸಂಘದ ಸಭಾಭವನದಲ್ಲಿ ಮಲ್ಪೆಯ ಮೀನುಗಾರ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಮತಯಾಚನೆ ಮಾಡಿ ಗೆಲುವಿಗೆ ಸಹಕಾರ ಕೋರಿದರು.
ಕರಾವಳಿ ಭಾಗದ ಮೀನುಗಾರರು ನಿರಂತರವಾಗಿ ರಾಷ್ಟ್ರೀಯತೆ, ಹಿಂದುತ್ವ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಸದಾ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸತತ 3ನೇ ಬಾರಿಗೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಿದ್ದಾರೆ.
ಈ ಹಿಂದೆ ಮೀನುಗಾರಿಕಾ ಸಚಿವರಾಗಿದ್ದ ಅವಧಿಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಸುಮಾರು 22 ಸಾವಿರ ಮಹಿಳಾ ಮೀನುಗಾರರ ಸಾಲ ಮನ್ನಾ, ಹಲವು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ 180 ಕೋಟಿ ರೂ. ಮಂಜೂರು ಹಾಗೂ ವಿವಿಧ ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ 26 ಸಾವಿರ ಕೋಟಿ ಅನುದಾನ ಒದಗಿಸಿದ್ದು, ಸಾಗರಮಾಲ ಯೋಜನೆಯ ಮೂಲಕ ಬಂದರುಗಳ ಅಭಿವೃದ್ದಿ, ಕರಾವಳಿ ಜಿಲ್ಲೆಯ ಉತ್ಪನ್ನವಾಗಿ ಸಾಗರೋತ್ಪನ್ನ ವನ್ನಾಗಿ ಆಯ್ಕೆ ಮಾಡಿದ್ದು, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಮೂಲಕ ಮೀನುಗಾರರ ಬಗ್ಗೆ ತನ್ನ ಬದ್ಧತೆಯನ್ನು ನಿರೂಪಿಸಿದೆ ಎಂದರು.
ಕೇಂದ್ರ ಸರ್ಕಾರ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಯ ಜೊತೆ ಜೊತೆಗೆ ಮೀನುಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಅನುಷ್ಠಾನಕ್ಕೆ ಮೋದಿ ಸರಕಾರ ಬದ್ಧವಾಗಿದ್ದು, ಈ ಬಾರಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಗೆ ಶಕ್ತಿ ತುಂಬುವಂತೆ ಕರೆ ನೀಡಿದರು.
ಸಭೆಯಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಮೀನುಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಭರವಸೆ ಉಳಿದಿಲ್ಲ.
ಕರಾವಳಿ ಮೀನುಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಭರವಸೆ ಉಳಿದಿಲ್ಲ. 2018ರ ಸುವರ್ಣ ತ್ರಿಭುಜ ಬೋಟ್ ದುರಂತ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಯಾವುದೇ ಪರಿಹಾರ ನೀಡದೇ ಅನ್ಯಾಯವೆಸಗಿದೆ. ಮುಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಶೇಷ ಪ್ರಕರಣದಡಿ ಸಂತ್ರಸ್ತ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಿ ಆರ್ಥಿಕ ಸ್ಥೈರ್ಯ ತುಂಬಿದೆ ಎಂದು ಬಿಜೆಪಿ ಮೀನುಗಾರ ಪ್ರಕೋಷ್ಟ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರವಿರಾಜ್ ಸುವರ್ಣ ತಿಳಿಸಿದ್ದಾರೆ.
ಕಳೆದ ವರ್ಷ ಉಚ್ಚಿಲದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಡೆಸಿದ ಮೀನುಗಾರರ ಸಂವಾದದಲ್ಲಿ ನೀಡಿದ ಯಾವುದೇ ಭರವಸೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈಡೇರಿಸದೇ ನಿರಂತರವಾಗಿ ಮೀನುಗಾರರಿಗೆ ಚೊಂಬು ನೀಡಿ ಮೋಸ ಮಾಡಿದೆ ಎಂದು ರವಿರಾಜ್ ಸುವರ್ಣ ತಿಳಿಸಿದ್ದಾರೆ.