ವಿಜಯವಾಡ: ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಪಕ್ಷದ ಸ್ಥಾಪಕ, ಖ್ಯಾತ ನಟ ಪವನ್ ಕಲ್ಯಾಣ್, ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಮತ್ತು ಜನಸೇನಾ ಹಿರಿಯ ನಾಯಕ ನಾದೆಂಡ್ಲ ಮನೋಹರ್ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಪ್ರಮಾಣ ವಚನ ಬೋಧಿಸಿದರು
ಪ್ರಮಾಣ ವಚನ ಸ್ವೀಕರಿಸಿದ ನಂತರ ನಾಯ್ಡು ಅವರು ವೇದಿಕೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಅಪ್ಪಿಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್ ಡಿ ಎ ಮಿತ್ರ ಪಕ್ಷದ ಪ್ರಮುಖ ನಾಯಕ, ಸಚಿವ ರಾಮದಾಸ್ ಅಠವಳೆ , ಅನುಪ್ರಿಯಾ ಪಟೇಲ್, ಚಿರಾಗ್ ಪಾಸ್ವಾನ್, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಮತ್ತು ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ತೆಲಂಗಾಣ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.