ಹೊಸ ಕ್ರಿಮಿನಲ್ ಕಾನೂನುಗಳಿಂದ ದೇಶದಲ್ಲಿ ಅರಾಜಕತೆ ಸೃಷ್ಠಿ

Share with

ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ದೇಶದಲ್ಲಿ ಅರಾಜಕತೆ ಸೃಷ್ಠಿಯಾಗುವುದು ಶತಸಿದ್ಧ. ಈ ಮೂಲಕ ಯಾರ ಭಯವೂ ಇಲ್ಲದೆ ಈ ಸಮಾಜವನ್ನು ಬಲಾಢ್ಯರು, ರಾಜಕಾರಣಿಗಳು ಹಾಗೂ ಪೊಲೀಸರು ಆಳುವ ಪರಿಸ್ಥಿತಿ ಎದುರಾಗುತ್ತದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗ ದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ಸಂವಾದ ಕಾರ್ಯ ಕ್ರಮದಲ್ಲಿ ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಅವರು ಮಾತನಾಡಿದರು.
ಯಾವುದೇ ಪ್ರಕರಣದಲ್ಲಿ ಎಫ್‌ಐಆರ್ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಈ ಹೊಸ ಕಾನೂನಿನಲ್ಲಿ ಮೂರು ವರ್ಷಕ್ಕಿಂತ ಹೆಚ್ಚು ಹಾಗೂ ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸುವಂತಹ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಬಂದ ಕೂಡಲೇ ಪೊಲೀಸರು ತನಿಖೆ ಮಾಡಬೇಕಾಗಿಲ್ಲ. ಪ್ರಾಥಮಿಕ ತನಿಖೆ ನಡೆಸಲು ಪೊಲೀಸರಿಗೆ 14 ದಿನಗಳ ಕಾಲಾವಕಾಶ ಕೊಡಲಾಗಿದೆ. ನಮ್ಮ ದೇಶದಲ್ಲಿ ಶೇ.75ರಷ್ಟು ಕಾನೂನುಗಳು ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ವಿಧಿಸುವಂತದ್ದು. ಆದುದರಿಂದ ಈ ಅಂಶದಿಂದ ಸಂತ್ರಸ್ತರು ನ್ಯಾಯ ವಂಚಿತರಾಗುವ ಸಾಧ್ಯತೆ ಹೆಚ್ಚು. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.
ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೋಸಿಜರ್ ಕೋಡ್ (ಸಿಆರ್‌ಪಿಸಿ), ಭಾರತ ಸಾಕ್ಷ್ಯ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದುವೇ ನಿಜವಾದ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್. ಈ ಮೂರು ಕಾನೂನುಗಳು ರತ್ನಗಳು ಇದ್ದಂತೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಹೊಸ ಕಾನೂನು ಯಾವ ಉದ್ದೇಶಕ್ಕೆ ತರಲಾಗಿದೆ ಎಂಬುದು ಅರ್ಥ ಆಗುತ್ತಿಲ್ಲ ಎಂದು ಹೇಳಿದರು.
ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರ ನಾಥ್ ಶಾನುಭೋಗ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.
ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಮೈಕಲ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *