ಉಡುಪಿ: ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್

Share with

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಸುವರ್ಣಾವಕಾಶ

ಸುದ್ದಿಗೋಷ್ಠಿಯಲ್ಲಿ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಮಾಹಿತಿ
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ನಿರ್ದೇಶನದ ಮೇರೆಗೆ ಇದೇ ಜುಲೈ 13ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣವರ್ ತಿಳಿಸಿದರು.
ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್‌/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರು/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಚೇದನೆಯನ್ನು ಹೊರತುಪಡಿಸಿ, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ನ್ಯಾಯಾಲಯಗಳಲ್ಲಿ ಉಭಯಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಭಾರ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಹೆಚ್ಚುವರಿ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಧೀಶ ಶ್ರೀನಿವಾಸ ಮೂರ್ತಿ, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *