ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ: ಸಿಎಂ ಸಿದ್ದರಾಮಯ್ಯ

Share with

ಬೆಂಗಳೂರು: ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ, ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಿಪಿಎಲ್‌ ಕಾರ್ಡು ಹೊಂದಲು ಅರ್ಹರಿರುವ ಯಾರಾದರೂ ಬಿಟ್ಟು ಹೋಗಿದ್ದರೆ, ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಿ, ವರ್ಗ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪ್ರಸ್ತಾವ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಬೇಕು ಎಂದು ಅವರು ಹೇಳಿದರು.

ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಇನ್ನು ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ 3 ಇಲಾಖೆಯ ಅಧಿಕಾರಿಗಳು ಇದ್ದರು.


Share with

Leave a Reply

Your email address will not be published. Required fields are marked *