ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ಕರಾವಳಿಯಲ್ಲಿ ಜೂನ್ 14ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಆ ಅವಧಿಯವರೆಗೆ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಿಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಿದ್ದರೆ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ನಿರೀಕ್ಷೆಗಳಿವೆ. ಕರ್ನಾಟಕದ ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ. ಜೂನ್ 10ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.




