ಬೆಂಗಳೂರು: ಶಿಕ್ಷಕಿ ಬೈದಿದ್ದರಿಂದ ಮನನೊಂದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮಧುಶ್ರೀ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕುಟುಂಬದವರು ಮನೆಗೆ ಬಂದಾಗ ಮಧುಶ್ರೀ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಮನಕಲಕುವ ರೀತಿಯಲ್ಲಿ ಉಲ್ಲೇಖಿಸಲಾಗಿದೆ.
ಡೆತ್ ನೋಟ್ನಲ್ಲಿ, “ನನ್ನ ವಿರುದ್ಧ ಇಲ್ಲಸಲ್ಲದ ಅಪವಾದಗಳನ್ನು ಹೊರಿಸಿದ್ದಾರೆ. ನನಗೆ ತುಂಬಾ ಅವಮಾನವಾಗಿದೆ. ಈ ಅವಮಾನವನ್ನು ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.
ವಿದ್ಯಾರ್ಥಿನಿಯ ಸಾವಿನ ನಿಖರ ಕಾರಣ ಹಾಗೂ ಡೆತ್ ನೋಟ್ನಲ್ಲಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಶಾಲೆಯ ಶಿಕ್ಷಕರು ಹಾಗೂ ಸಂಬಂಧಪಟ್ಟವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ತನಿಖೆಯ ಬಳಿಕವೇ ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರುವ ಸಾಧ್ಯತೆ ಇದೆ.




