ಬಸ್ ನಿಲ್ದಾಣದಲ್ಲಿ ಯುವತಿಗೆ ಚೂರಿ ಇರಿದು ಹತ್ಯೆ..!

Share with

ಬೀಸಿರೋಡ್: ಕೆ ಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಯುವತಿಯೋರ್ವಳನ್ನು ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೈದ ಘಟನೆ ಇಂದು ನಡೆದಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ 21 ವರ್ಷ ಪ್ರಾಯದ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್‌ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆ‌ರ್ ಟಿಸಿ ಬಸ್‌ ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಬಸ್ ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದ್ದ ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟ‌ರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.


Share with

Leave a Reply

Your email address will not be published. Required fields are marked *