ಕರ್ನೂಲು : ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ (ಜು.21) ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ರವಿಶೆಟ್ಟಿ (43) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ರವಿ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯರು ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಘಾತ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.




