
ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ 2026-27ನೇ ಸಾಲಿನ ಚುನಾವಣೆಗೆ ಪ್ರಕಟಿಸಿರುವ ಮೀಸಲಾತಿ ಬದಲಾಯಿಸಿ, ಪರಿಶಿಷ್ಟ ಜಾತಿಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಸಮಾಜಸೇವಕ ಹಾಗೂ ಉದ್ಯಮಿ ಅರೇಹಳ್ಳಿ ವಿರೂಪಾಕ್ಷ ಅವರ ನೇತೃತ್ವದಲ್ಲಿ ಗ್ರಾಮದ ಮುಖಂಡರು ಬೆಂಗಳೂರಿನ ವಿಧಾನಸೌಧದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಮನವಿ ಸಲ್ಲಿಸಿದರು.
2026-27ನೇ ಸಾಲಿನ ಜಿಲ್ಲಾ ಪಂಚಾಯಿತಿ ಚುನಾವಣೆಯ ಜಾತಿವಾರು ಮೀಸಲಾತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿರುವ ಮುಖಂಡರು, ಈ ಬಾರಿ ಅರೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡುವಂತೆ ಒತ್ತಾಯಿಸಿದ್ದಾರೆ.
ಅರೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು 2006ರಲ್ಲಿ ನಾಗೇನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಪ್ರತ್ಯೇಕಗೊಂಡಿದ್ದು, ಅದಕ್ಕೂ ಮೊದಲು ಹಾಗೂ ಸ್ವತಂತ್ರ ಕ್ಷೇತ್ರವಾಗಿ ರೂಪುಗೊಂಡ ನಂತರವೂ ಪರಿಶಿಷ್ಟ ಜಾತಿಯ ಪುರುಷ ಅಭ್ಯರ್ಥಿಗಳಿಗೆ ಮೀಸಲಾತಿ ಅವಕಾಶ ಕಲ್ಪಿಸಿಲ್ಲ ಎಂದು ಮುಖಂಡರು ಆರೋಪಿಸಿದ್ದಾರೆ. 1995ರಿಂದ ಈವರೆಗೂ ಪರಿಶಿಷ್ಟ ಜಾತಿಯ ಪುರುಷ ಅಭ್ಯರ್ಥಿಗಳಿಗೆ ಒಂದು ಬಾರಿಯೂ ಮೀಸಲಾತಿ ನೀಡದಿರುವುದು ಸಮುದಾಯಕ್ಕೆ ಆಗಿರುವ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಸುಮಾರು 18ರಿಂದ 19 ಸಾವಿರ ಜನಸಂಖ್ಯೆಯಿದ್ದು, ಅದರಲ್ಲಿ 8ರಿಂದ 9 ಸಾವಿರ ಮಂದಿ ಪರಿಶಿಷ್ಟ ಜಾತಿಗೆ ಸೇರಿದವರಿದ್ದಾರೆ. ಇಷ್ಟೊಂದು ಸಂಖ್ಯೆಯ ಜನಸಂಖ್ಯೆ ಹೊಂದಿದ್ದರೂ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದು ಮುಖಂಡರ ಆಕ್ಷೇಪವಾಗಿದೆ.
2016-17ನೇ ಸಾಲಿನ ಹಿಂದಿನ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿಯೂ ಈ ಕ್ಷೇತ್ರವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು. ಇದೀಗ 2026-27ನೇ ಸಾಲಿನ ಚುನಾವಣೆಯಲ್ಲಿಯೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಪಡಿಸಿರುವುದು ಪರಿಶಿಷ್ಟ ಜಾತಿಯವರಿಗೆ ಮತ್ತೊಮ್ಮೆ ಅನ್ಯಾಯ ಮಾಡಿದಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆದ್ದರಿಂದ ಸರ್ಕಾರವು ಅರೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮೀಸಲಾತಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಪ್ರಸ್ತುತ ಪ್ರಕಟಿಸಿರುವ ಮೀಸಲಾತಿಗೆ ತಡೆಯಾಜ್ಞೆ ನೀಡಿ, ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅರೇಹಳ್ಳಿ ವಿರೂಪಾಕ್ಷ ಅವರ ನೇತೃತ್ವದ ಗ್ರಾಮದ ಮುಖಂಡರು ಮನವಿ ಮಾಡಿದ್ದಾರೆ.




