ಹೆತ್ತೂರು ತಾಯಿ-ಮಗು ಸಾವಿನ ಪ್ರಕರಣ: ಆರೋಗ್ಯ ಇಲಾಖೆಯಿಂದ ವಿಶೇಷ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ

Share with


ಸಕಲೇಶಪುರ:  ತಾಲ್ಲೂಕಿನ ಹೆತ್ತೂರು ಹೋಬಳಿಯ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದ ತಾಯಿ ಮತ್ತು ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ತನಿಖೆಯನ್ನು ಚುರುಕುಗೊಳಿಸಿದೆ. ಆಸ್ಪತ್ರೆಯ ಸಿಬ್ಬಂದಿ ಮಂಜುಳಾ ಅವರ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರ್‌ಸಿಎಚ್ ವೈದ್ಯಾಧಿಕಾರಿ ಡಾ. ಫಾತಿಮಾ ಆರ್. ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ನಡೆಸಿತು. ಮೃತರ ಕುಟುಂಬಸ್ಥರು, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪ್ರತ್ಯೇಕವಾಗಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಅಲ್ಲದೆ, ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಘಟನೆಗೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಾಯಿತು. ಇದೇ ಸಂದರ್ಭದಲ್ಲಿ ಯೂತ್ ಲಯನ್ಸ್ ಫೆಡರೇಶನ್ ಸಕಲೇಶಪುರದ ಪದಾಧಿಕಾರಿಗಳಾದ ನಾಗೇಶ್ ಎಂ.ಎಚ್. ಮಾಗೇರಿ, ಯೋಗೇಶ್ ಡಿ.ಆರ್. ದೊಡ್ಡಕಲ್ಲೂರು ಹಾಗೂ ವಿಕ್ರಮ್ ಹೆತ್ತೂರು ಅವರಿಂದಲೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಹೇಳಿಕೆಗಳನ್ನು ಪಡೆಯಲಾಯಿತು.


Share with

Tags:

Leave a Reply

Your email address will not be published. Required fields are marked *