
ಹಾಸನ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ ಹತ್ತಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು, ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆಲೂರು ಬಸ್ ನಿಲ್ದಾಣದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಪಾಳ್ಯ ಹೋಬಳಿಯ ಹೊನ್ನವಳ್ಳಿ ಗ್ರಾಮದ ನಿವಾಸಿ ಪುಟ್ಟರಾಜು (40) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬುಧವಾರ ಆಲೂರು ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ವೇಳೆ ಊರಿಗೆ ತೆರಳಲು ಪುಟ್ಟರಾಜು ಅವರು ಬಸ್ ಹತ್ತಲು ಮುಂದಾಗಿದ್ದಾರೆ. ಆದರೆ, ಬಸ್ನಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದರಿಂದ ಹಾಗೂ ಬಸ್ ಚಲಿಸುತ್ತಿದ್ದ ಕಾರಣ, ಅವರು ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.




