
ಸಕಲೇಶಪುರ: ಮಾಜಿ ಶಾಸಕ ದಿವಂಗತ ಜೆ.ಡಿ. ಸೋಮಪ್ಪ ಅವರ ಪತ್ನಿ ಹಾಗೂ ಸಕಲೇಶಪುರ ಪುರಸಭೆಯ ಮಾಜಿ ಸದಸ್ಯೆಯಾಗಿದ್ದ ಜಯಮ್ಮ (86) ಅವರು ಸೋಮವಾರ ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬದವರು, ಬಂಧುಗಳು ಹಾಗೂ ಹಿತೈಷಿಗಳಲ್ಲಿ ದುಃಖದ ಛಾಯೆ ಆವರಿಸಿದೆ.
ಜಯಮ್ಮ ಅವರು ಸಾರ್ವಜನಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದರು. ಸಕಲೇಶಪುರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪಟ್ಟಣದ ಲಕ್ಷ್ಮಿಪುರ ಬಡಾವಣೆಯನ್ನು ಪ್ರತಿನಿಧಿಸಿ ಪುರಸಭೆ ಸದಸ್ಯೆಯಾಗಿಯೂ ಆಯ್ಕೆಯಾಗಿದ್ದರು. ತಮ್ಮ ಸೇವಾವಧಿಯಲ್ಲಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅವರ ಪತಿ ದಿವಂಗತ ಜೆ.ಡಿ. ಸೋಮಪ್ಪ ಅವರು 1978ರಿಂದ 1983ರವರೆಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಮೃತರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸಕಲೇಶಪುರ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಜಯಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಯಮ್ಮ ಅವರ ನಿಧನಕ್ಕೆ ಶಾಸಕ ಸಿಮೆಂಟ್ ಮಂಜು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.




