ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದ ಶೋಭಾಯಾತ್ರೆಯು ಅ.24ರಂದು ಸಂಜೆ ಆರಂಭಗೊಂಡು ಅ.25ರಂದು ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರ ಸಂಖ್ಯೆಯಲ್ಲಿ ಜನರು ಕಣ್ತುಂಬಿಕೊಂಡರು.
ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಕ್ಷೇತ್ರದಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ನಾರಾಯಣ ಗುರು ಸರ್ಕಲ್, ಲಾಲ್‌ಬಾಗ್, ಬಳ್ಳಾಲ್‌ಬಾಗ್, ಪಿವಿಎಸ್ ವೃತ್ತ, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ.ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಅಳಕೆಯ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು.
ಶಾಸಕ ಡಿ.ವೇದವ್ಯಾಸ ಕಾಮತ್, ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ಸೂರ್ಯಕುಮಾರ್ ಸುವರ್ಣ, ಎಂ.ಶಶಿಧರ ಹೆಗ್ಡೆ, ಅಶ್ವಿತ್ ಸುವರ್ಣ, ಚಿತ್ತರಂಜನ್ ಬೋಳಾರ್, ಜಿತೇಂದ್ರ ಕೊಟ್ಟಾರಿ, ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಮುಖರಾದ ಮಾಧವ ಸುವರ್ಣ, ಊರ್ಮಿಳಾ ರಮೇಶ್ ಕುಮಾರ್, ಹರಿಕೃಷ್ಣ ಬಂಟ್ವಾಳ, ಡಾ| ಬಿ.ಜಿ.ಸುವರ್ಣ ಸಹಿತ ಹಲವು ಗಣ್ಯರು ಭಾಗವಹಿಸಿದ್ದರು.