ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಬಿವೈ ವಿಜಯೇಂದ್ರ ಅವರು ನ.15ರಂದು ಅಧಿಕಾರ ಸ್ವೀಕಾರ ಮಾಡಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಆಶೀರ್ವಾದದಿಂದ ನಾನು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ. ರಾಜ್ಯದ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.