ಕಾಪು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನ.14ರಂದು ನಡೆದಿದೆ ಎಂದು ವರದಿಯಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರೊಂದು ಇವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು ಎನ್ನಲಾಗಿದ್ದು, ಇದರಿಂದ ಗಂಭೀರ ಗಾಯಗೊಂಡಿದ್ದ ಉತ್ತಮ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.