ಬೆಂಗಳೂರು: ಐತಿಹಾಸಿಕ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ನ.25ರಂದು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ನಮ್ಮ ಕಂಬಳ-ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ನ.25ರಂದು ಮತ್ತು ನ.26ರಂದು ಎರಡು ದಿನಗಳ ಕಾಲ ಪಂದ್ಯ ನಡೆಯಲಿದ್ದು, ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಇದೇ ವೇಳೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ ಸದಾನಂದ ಗೌಡ, ಶಾಸಕ ಎಸ್.ಆರ್ ವಿಶ್ವನಾಥ್, ಸಂಗೀತ ನಿರ್ದೇಶಕ ಗುರುಕಿರಣ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಸೇರಿದಂತೆ ಅನೇಕರು ಭಾಗವಹಿಸಿದ್ದರು.