
ಬೇಲೂರು: ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿದೆ. ತಾಲ್ಲೂಕಿನ ನಾಗಿನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜ್ ಉರ್ ರೆಹಮಾನ್ (57) ಎಂಬುವವರು ಕಾಡಾನೆ ತುಳಿತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.




