ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಶುಕ್ರವಾರ ಸೇನಾ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸೇನಾ ಸಿಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹೈದರಾಬಾದ್ನ ಗೋಲ್ಗೊಂಡ ಸೇನಾ ಶಿಬಿರದಿಂದ ತರಬೇತಿ ಕಾರ್ಯದ ನಿಮಿತ್ತ ಶಾಬಾದ್ ಪಟ್ಟಣಕ್ಕೆ ಸೇನಾ ಸಿಬಂದಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ತರಬೇತುದಾರರು ಚಲಾಯಿಸುತ್ತಿದ್ದ ಸೇನಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಲವು ಬಾರಿ ಪಲ್ಟಿಯಾಗಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡ ಏಳು ಮಂದಿಯನ್ನು ಚಿಕಿತ್ಸೆಗಾಗಿ ಗೋಲ್ಗೊಂಡದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಸೇನಾ ಸಿಬಂದಿ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ. ಇದೊಂದು ಸ್ವಯಂ ಅಪಘಾತ ಎಂದು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಸೇನಾ ಸಿಬಂದಿಯೇ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಉಳಿದ ಐವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




