ಮಂಗಳೂರು: ಮಂಗಳೂರು ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಮೈದಾನಕ್ಕೆ ತೆರಳುವ ದಾರಿಯಲ್ಲಿ ಬೋಂದೆಲ್ನಲ್ಲಿ ಕಾರ್ಯಕರ್ತರು ಭಿತ್ತಿ ಪತ್ರ ಪ್ರದರ್ಶಿಸಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೆರೋಸಾ ಶಾಲೆಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ್ದು ಹಾಗೂ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದನ್ನು ಖಂಡಿಸಿ ಈ ಮುತ್ತಿಗೆ ಯತ್ನ ನಡೆಸಲಾಗಿತ್ತು ಎನ್ನಲಾಗಿದೆ.
ಈ ಸಂದರ್ಭ ಸ್ಥಳಕ್ಕಾಗಮಿಸಿದ ಪೊಲೀಸರು ಯಾವುದೇ ತೊಂದರೆ ಉಂಟು ಮಾಡದಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೂ ನಂತರ ಪರಿಸ್ಥಿತಿ ಕೈ ಮೀರಿದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಎಲ್ಲರನ್ನೂ ಬಂಧಿಸುವಂತೆ ಆದೇಶಿಸಿದರು.