ಬಂಟ್ವಾಳ: ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Share with

ಬಂಟ್ವಾಳ: ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪದ್ಮನಾಭ ಸಾಮಂತ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ.

ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದ್ದು, ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಮೃತ ಯುವಕ ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೋಲೀಸರಿಗೆ ತಿಳಿಸಿದ್ದ. ಆದರೆ ಯುವಕ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿತ್ತು. ಯಾರ ಸಂಪರ್ಕಕ್ಕೂ ಸಿಗದೆ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯ ಪಕ್ಕದ ಗುಡ್ಡವೊಂದರಲ್ಲಿ ಪತ್ತೆಯಾಗಿದೆ. ಪೋಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಪೋಲಿಸ್ ಪ್ರಾಥಮಿಕ ಮಾಹಿತಿ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಆದರೆ ನಿಜಾಂಶವೇನು ಎನ್ನುವುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದುಬರಬೇಕಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪದ್ಮನಾಭ ಅವರ ಮನೆಗೆ ತೆರಳಿ ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ.


Share with

Leave a Reply

Your email address will not be published. Required fields are marked *