ಬೆಂಗಳೂರು: ಬೆಂಗಳೂರಿನ ನಲವತ್ತೆಂಟು ಖಾಸಗಿ ಶಾಲೆಗಳಿಗೆ ಡಿ.1ರಂದು ಬೆಳಗ್ಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭಯ ಹುಟ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಪೊಲೀಸರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಶಾಲೆಯ ಆವರಣದಿಂದ ಹೊರಗೆ ಕಳುಹಿಸಿ, ತೀವ್ರ ತಪಾಸಣೆ ನಡೆಸಿದರು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಪ್ರಾಥಮಿಕ ತನಿಖೆಯಿಂದ ಇದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಕೆಲವು ಶಾಲೆಗಳಿಗೆ ರಜೆ ಕೂಡಾ ಸಾರಲಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆಯಿಂದ ಇರಬೇಕು. ಬೆದರಿಕೆ ಕರೆ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೋಷಕರು ಆತಂಕ ಪಡಬಾರದು. ಬೆದರಿಕೆ ಕರೆ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.