
Bengaluru Stampede : ಚಿನ್ನಸ್ವಾಮಿ ಕ್ರೀಡಾಂಗಣದ
ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಡಿಸಿಪಿ, ಎಸಿಪಿ, ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.ಆರ್‌ಸಿಬಿ ಸೇರಿ ಡಿಎನ್‌ಎ ಹಾಗೂ ಕೆಎಸ್‌ಸಿಎ ಮುಖ್ಯಸ್ಥರನ್ನು ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ ನಡೆದ ತುರ್ತು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಮೈಕೆಲ್ ಕುನ್ಹಾರ ಆಯೋಗಕ್ಕೆ 30 ದಿನ ಗಡುವು ನೀಡಲಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ನಿರ್ಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕದಾಗಿನಿಂದ ಸಿಎಂ ಆದ ಇಲ್ಲಿಯವರಿಗೆ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.
ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು
1. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
2. ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್
3. ಕೇಂದ್ರ ವಿಭಾಗದ ಡಿಸಿಪಿ ಶೇಖರ್
4. ಕಬ್ಬನ್ ಪಾರ್ಕ್ ಎಸಿಪಿ ಬಾಲಕೃಷ್ಣ
5. ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್ ಮತ್ತು ಸಿಬ್ಬಂದಿ




