ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ
ಉಡುಪಿ: ಹೈನುಗಾರರ ಬಾಕಿ ಪ್ರೋತ್ಸಾಹಧನ ಬಿಡುಗಡೆ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಚೆಂಡೆವಾದನ, ದನ-ಕರು, ಕೋಣಗಳೊಂದಿಗೆ ಬಿಜೆಪಿ ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪಾದಯಾತ್ರೆ ನಡೆಸಿದರು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಹೈನುಗಾರರಿಗೆ 1,098 ಕೋಟಿ ರೂ. ಪ್ರೋತ್ಸಾಹಧನ ಬರಬೇಕಿದೆ. ಸರಕಾರ ಒಂದು ತಿಂಗಳೊಳಗೆ ಬಿಡುಗಡೆ ಮಾಡದಿದ್ದರೆ ಹಸುಗಳನ್ನು ತಂದು ಡಿಸಿ ಕಚೇರಿಯಲ್ಲಿ ಕಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ನವೀನ್ ಕುಮಾರ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿದರು.
ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರ್ ರತ್ನಾಕರ ಹೆಗ್ಡೆ, ವಿವಿಧ ಮೋರ್ಚಾಗಳ ಮತ್ತು ಪ್ರಕೋಷ್ಟದ ಪ್ರಮುಖರು ಭಾಗವಹಿಸಿದ್ದರು.