ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಸಮೀಪದಲ್ಲಿ ಕಾರೊಂದು ಹೊತ್ತಿ ಉರಿದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

ಕೋರಮಂಗಲ ನಿವಾಸಿ ಸಚಿನ್ ಎಂಬವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ. ಯಾರಿಗೂ ಗಾಯಗಳಾಗಿಲ್ಲಯ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಕೆಲವು ಸಚಿವರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ತಮ್ಮ ನಿವಾಸದಲ್ಲಿ ಸಭೆ ನಡೆಸುತ್ತಿದ್ದರು. ಇದೇ ವೇಳೆ ಮನೆಯ ಕೂಗಳತೆ ದೂರದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡು ಬೆಂಕಿ ಸ್ಪರ್ಶವಾಗಿದೆ.
ಕೂಡಲೇ ಕಾರಿನ ಮಾಲಕ ಸಚಿನ್ ಅವರು ಅಗ್ನಿಶಾಮಕ ದಳ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ ರಕ್ಷಣ ಸಿಬಂದಿ ಬರುವಷ್ಟರಲ್ಲಿ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ರಸ್ತೆಯ ಎರಡು ಕಡೆಯೂ ಬ್ಯಾರಿಕೇಡ್‌ಗಳನ್ನು ಹಾಕಿ ಇತರ ವಾಹನಗಳನ್ನು ನಿರ್ಬಂಧಿಸಿದರು.




