ಬೆಂಗಳೂರು: ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರ ಹಾಗೂ ತಂಡ ವಂಚನೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ರೀನಾ ಸುವರ್ಣ ಅವರು ಸ್ವಾಮೀಜಿಗೆ ನೋಟಿಸ್ ಪ್ರತಿ ಕಳುಹಿಸಿದ್ದು ‘ನೋಟಿಸ್ ತಲುಪಿದ ಮೂರು ದಿನಗಳ ಒಳಗೆ ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಿದ್ದಾರೆ.
ಚೈತ್ರಾ ವಂಚನೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು ಎಂದು ಪರಿಚಯಸ್ಥರ ಬಳಿ ಹೇಳಿದ್ದರು ಎನ್ನಲಾಗಿದ್ದು ಈ ಬಗ್ಗೆ ಮಾಧ್ಯಮಗಳಲ್ಲಿ ಕೂಡ ಸುದ್ದಿ ಪ್ರಕಟವಾಗಿತ್ತು. ಈ ಕಾರಣಕ್ಕೆ ಅವರಿಗೆ ನೋಟಿಸ್ ನೀಡಲಾಗಿದ್ದು ವಿಚಾರಣೆಗೆ ಬಂದು ಮಾಹಿತಿ ನೀಡುವಂತೆ ತಿಳಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ನಿಗದಿತ ದಿನದಂದು ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿವೆ ಎಂದು ವರದಿಯಾಗಿದೆ.