ಹೆರಿಗೆಯ ಸಂದರ್ಭದಲ್ಲಿ ಮಗು ಸಾವು: ಸರಕಾರಿ ಆಸ್ಪತ್ರೆಯ ಎದುರು ಪ್ರತಿಭಟನೆ

Share with

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಮಗುವನ್ನು ಕಳೆದುಕೊಂಡ ಪೋಷಕರ ಜೊತೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಕುಂದಾಪುರದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ನ.17ರಂದು ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪ್ರತಿಭಟನೆಯನ್ನು ನಡೆಸಿದರು. ಘಟನೆಗೆ ಸಂಬಂಧಪಟ್ಟ ವೈದ್ಯರ ಅಮಾನತು ಮಾಡಿ, ಪ್ರಕರಣದ ಸಮಗ್ರ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮವಹಿಸಬೇಕು. ಸ್ಥಳಕ್ಕೆ ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿ ಬರಬೇಕು ಎಂದು ಸೋಮವಾರ ಸಂಜೆ ಆಸ್ಪತ್ರೆಯ ಎದುರು ಕೂತು ಪ್ರತಿಭಟನೆ ಮೂಲಕ ಒತ್ತಾಯಿಸಿದರು.

ಮಗುವಿನ ಕುತ್ತಿಗೆಗೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದು ಉಡಾಫೆಯಿಂದ ಮಾತಾನಾಡಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಕ್ಯಾರೇ ಮಾಡಿಲ್ಲ. ಎಂಟೂವರೆ ತಿಂಗಳಿನ ವೇಳೆ ಸ್ಕಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಸ್ಕಾನಿಂಗ್ ಮಾಡಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಸಂಜೆ ಘಟನಾ ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಆಗಮಿಸಿ ಸಂತ್ರಸ್ತರ ಅಹವಾಲು ಆಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರೂ ಸಮಾಧಾನಗೊಳ್ಳದ ಪ್ರತಿಭಟನಾಕಾರರು ಜಿಲ್ಲಾ ಆರೋಗ್ಯ ಅಧಿಕಾರಿ ಡಿ ಎಚ್ ಓ ಸ್ಥಳಕ್ಕೆ ಆಗಮಿಸಿ ತಪ್ಪಿತಸ್ಥ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಡಿ.ಎಚ್.ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಅವರು ಪ್ರತಿಭಟನಾಕಾರರಲ್ಲಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರು. ಇನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿದರು.


Share with

Leave a Reply

Your email address will not be published. Required fields are marked *