ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಂಡಾಯವಾಗಿ ಸ್ಪರ್ಧಿಸಿರುವವರಿಂದ ಯಾವುದೇ ರೀತಿಯ ಹೊಡೆತ ಬೀಳಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಎಲ್ಲ ಆರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದರು.
ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ನಮ್ಮ ಆರು ಅಭ್ಯರ್ಥಿಗಳು ಗೆಲ್ಲಬೇಕು ಎಂದು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಅದರಂತೆ ನಮ್ಮ ಎಲ್ಲ ವರಿಷ್ಠರು, ನಾಯಕರು ಚುನಾವಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ ಎಂದು ಹೇಳಿದರು.
ಬಂಡಾಯ ಎಂಬುದು ಎಲ್ಲ ಪಕ್ಷದಲ್ಲೂ ಇರುತ್ತದೆ. ಬಿಜೆಪಿಯಲ್ಲೂ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಇಂದು ವಿಶ್ವಾದ ಮೇಲೆಯೇ ಅಧಿಕಾರಕ್ಕೆ ಬಂದಿದೆ. ಎಲ್ಲ ಐದು ಗ್ಯಾರಂಟಿ ಗಳನ್ನು ಅನುಷ್ಠಾನ ಮಾಡಲಾಗಿದೆ. ಈ ಯೋಜನೆ ಲೋಕಸಭಾ ಹಾಗೂ ಈ ವಿಧಾನ ಪರಿಷತ್ ಚುನಾವಣೆಗೂ ಸಹಾಯ ಆಗುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಡಾ.ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮಮತಾ ಗಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಐವನ್ ಡಿಸೋಜ, ಹರೀಶ್ ಕಿಣಿ, ರಮೇಶ್ ಕಾಂಚನ್ ಉಪಸ್ಥಿತರಿದ್ದರು