ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ

Share with

ನವದೆಹಲಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ರಕ್ಷಿಸಲು ಖಾಸಗಿ ಮಾರ್ಗಗಳ ಮೂಲಕ ಪ್ರಯತ್ನಗಳನ್ನು ಮಾಡುತ್ತಿರುವಾಗ, ಆ ದೇಶದ ರಾಜತಾಂತ್ರಿಕ ಸೂಕ್ಷ್ಮತೆಯಿಂದಾಗಿ ಭಾರತ “ಹೆಚ್ಚೇನೂ” ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

“ಯೆಮೆನ್‌ನ ಸೂಕ್ಷ್ಮತೆಯನ್ನು ಗಮನಿಸಿದರೆ ಭಾರತ ಸರ್ಕಾರವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ರಾಜತಾಂತ್ರಿಕವಾಗಿ ಗುರುತಿಸಲಾಗಿಲ್ಲ” ಎಂದು ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.

ಇದೇ ಜುಲೈ 16ರಂದು ಕೊಲೆ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲಾಗುತ್ತಿದೆ. ಹೀಗಾಗಿ ಅವರ ಪರ ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ರಾಜತಾಂತ್ರಿಕ ಮಾರ್ಗಗಳನ್ನು ಆದಷ್ಟು ಬೇಗ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದು, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರು ಇಂದು ಪ್ರಕರಣದ ವಿಚಾರಣೆ ನಡೆಸಿದರು.

ಈ ವೇಳೆ ಅಧಿಕೃತ ರಾಜತಾಂತ್ರಿಕ ಸಂಬಂಧಗಳ ಅನುಪಸ್ಥಿತಿಯಲ್ಲಿ ಸರ್ಕಾರವು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. “ನಾವು ಸಾರ್ವಜನಿಕವಾಗಿ ಮಾತನಾಡುವ ಮೂಲಕ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಲಿಲ್ಲ. ನಾವು ಖಾಸಗಿಯಾಗಿ ಪ್ರಯತ್ನಿಸುತ್ತಿದ್ದೇವೆ” ಎಂದು ಎಜಿ ಹೇಳಿದರು.


Share with

Leave a Reply

Your email address will not be published. Required fields are marked *