ಉಡುಪಿ: ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯ ಅಲ್ಲ. ಹಿಂದುಳಿದ ವರ್ಗಗಳ ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ. ಮುಂದಿನ ರಾಜಕೀಯ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಚರ್ಚೆ ಮಾಡುತ್ತೇನೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತು ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನೇಹಿತರು ಆಪ್ತರ ಜೊತೆ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಅಧಿಕೃತವಾಗಿ ಯಾರೂ ಸಂಪರ್ಕ ಮಾಡಿಲ್ಲ- ಮಾತುಕತೆ ಆಗಿಲ್ಲ. ಬಿಜೆಪಿಯ ಕೆಲ ಸ್ನೇಹಿತರು ಕರೆ ಮಾಡಿ ಮಾತನಾಡುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಬೇಕು ಬೇಡವೋ ಎಂದು ಮೊದಲು ಚರ್ಚೆ ಮಾಡುತ್ತೇನೆ. ಚುನಾವಣೆಗೆ ಸ್ಪರ್ಧಿಸಬೇಕೋ ಬೇಡವೋ ಎಂದು ಒಂದು ವಾರದ ಒಳಗೆ ತೀರ್ಮಾನ ಮಾಡುತ್ತೇನೆ ಎಂದರು.