ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 78ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ಮಾಡಿದ ಭಾಷಣದ ಸಂದರ್ಭದಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು.
ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವನ್ನು ಒತ್ತಿ ಹೇಳಿದ ಅವರು, ಆಗಾಗ ಚುನಾವಣೆಗಳು ನಡೆಯುತ್ತಿದ್ದರೆ ಅದು ದೇಶದ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದರು. ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುವುದರಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಚುನಾವಣೆಯೊಂದಿಗೆ ಜೋಡಿಸುವುದು ಇಂದು ರೂಢಿಯಾಗಿದೆ.
ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ, ಒಂದು ರಾಷ್ಟ್ರ, ಒಂದು ಚುನಾವಣೆ ಗುರಿಯನ್ನು ಸಾಧಿಸಲು ಎಲ್ಲರೂ ಒಗ್ಗೂಡಬೇಕೆಂದು ಪ್ರಧಾನಿ ಮೋದಿ ಒತ್ತಾಯಿಸಿದರು. ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ರಾಜಕೀಯ ಸ್ಥಿರತೆ ಮತ್ತು ಆಡಳಿತಾತ್ಮಕ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.