ಭಾರೀ ಮಳೆಯ ಮುನ್ನೆಚ್ಚರಿಕೆ; ನಾಳೆ(ಆ.4) ದ. ಕ ಶಾಲಾ ಕಾಲೇಜುಗಳಿಗೆ ರಜೆ

Share with

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 4, 2026 (ಮಂಗಳವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಮತ್ತು ವಸತಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಸಾರ್ವಜನಿಕರು ಹಾಗೂ ಪಾಲಕರು ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿರಬೇಕು ಹಾಗೂ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಲಾಗಿದೆ. ಪ್ರಕೃತಿ ವಿಕೋಪ ಸಂಬಂಧಿತ ತುರ್ತು ಸಹಾಯಕ್ಕಾಗಿ 1077 (ಟೋಲ್ ಫ್ರೀ) ಹಾಗೂ 0824-2442590 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.


Share with

Leave a Reply

Your email address will not be published. Required fields are marked *