ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ರಾಜಧಾನಿ ಚೆನ್ನೈ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂದಿನ ಕೆಲ ಗಂಟೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಿದೆ.

ಪುದುಚೇರಿ ಮತ್ತು ಕಾರೈಕಲ್ನಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ಪುದುಚೇರಿ ಮತ್ತು ಕಾರೈಕಲ್ ನಲ್ಲಿರುವ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅನೇಕ ವಸತಿ ಪ್ರದೇಶಗಳು ಮತ್ತು ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ತಮಿಳುನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ:
ತಮಿಳುನಾಡಿನ ದಕ್ಷಿಣ ಮತ್ತು ಡೆಲ್ಟಾ ಪ್ರದೇಶಗಳಲ್ಲಿ ಹೆಚ್ಚುನ ಮಳೆಯಾಗುವ ನಿರೀಕ್ಷೆಯಿದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ, ತೂತುಕುಡಿ, ರಾಮನಾಥಪುರಂ, ವಿರುಧುನಗರ, ಪುದುಕ್ಕೊಟ್ಟೆ, ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಕಾರೈಕಾಲ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.




