ಮತ್ತೆ ಬೇಲೂರು ಭಾಗಕ್ಕೆ 38 ಕಾಡಾನೆಗಳ ಹಿಂಡು ವಾಪಸ್; ರೈತರಲ್ಲಿ ಆತಂಕ

Share with


ಬೇಲೂರು: ಚಿಕ್ಕಮಗಳೂರು ಭಾಗದಿಂದ ಮತ್ತೆ ಬೇಲೂರು ತಾಲ್ಲೂಕಿನತ್ತ ಸುಮಾರು 38 ಕಾಡಾನೆಗಳ ಹಿಂಡು  ವಾಪಸ್ ಆಗಿರುವುದು ಸ್ಥಳೀಯ ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ. ನಾಗೇನಹಳ್ಳಿ ಮತ್ತು ಚಿಕ್ಕನಹಳ್ಳಿ ಭಾಗಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿರುವುದರಿಂದ ರೈತರು ಭಯದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆಗಳು ಕಾಡಾನೆಗಳ ದಾಳಿಗೆ ತುತ್ತಾಗುವ ಆತಂಕ ಒಂದೆಡೆಯಾದರೆ, ಕೃಷಿ ಚಟುವಟಿಕೆಗಳಿಗೆ ತೆರಳುವ ರೈತರು ಹಾಗೂ ಸಾರ್ವಜನಿಕರ ಸುರಕ್ಷತೆಯ ಬಗ್ಗೆಯೂ ಚಿಂತೆ ಎದುರಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳ ಹಿಂಡನ್ನು ಶೀಘ್ರವೇ ಸುರಕ್ಷಿತವಾಗಿ ಸ್ಥಳಾಂತರಿಸಿ, ರೈತರ ಬೆಳೆ ಮತ್ತು ಜೀವಹಾನಿಯನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಾನೆಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹರೀಶ್ ಗೌಡ ಎಚ್ಚರಿಕೆ ನೀಡಿದ್ದಾರೆ. ಅರಣ್ಯ ಇಲಾಖೆ ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ ರೈತರಿಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.


Share with

Leave a Reply

Your email address will not be published. Required fields are marked *