ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.
ಆದೇಶದ ಅನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ತೀರ, ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪಾಲಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಕೋರಲಾಗಿದೆ.
ಅಧಿಕಾರಿಗಳಿಗೆ ಸನ್ನದ್ಧರಾಗಿರಲು ಸೂಚನೆ
ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು. ವಿಪತ್ತು ನಿರ್ವಹಣಾ ಕಾರ್ಯಗಳಿಗೆ ಸನ್ನದ್ಧರಾಗಿರಬೇಕು. ನೋಡಲ್ ಅಧಿಕಾರಿಗಳು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಆದೇಶಿಸಲಾಗಿದೆ.




