ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಹಿರಿಯೂರಿಗೆ ಹೋಗುತ್ತಿದ್ದು, ಈ ವೇಳೆ ಲಾರಿಗೆ ಹಿಂಬದಿಯಿಂದ ಬಸ್ ಗುದ್ದಿದೆ. ಬಸ್ಸಿನ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿ ಎಡಗಡೆಯ ಸೀಟಿನಲ್ಲಿ ಮುಂದೆ ಕುಳಿತಿರುವ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.