
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬೈಪಾಸ್ ಸಂಪರ್ಕ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಸುನಿಲ್ ಟಿ.ಡಿ. (30) ಹಾಗೂ ಹಾಸನದ ವಿನಯ್ (30) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹಾಸನ ನಗರದ ತಣ್ಣೀರುಹಳ್ಳ ಪ್ರದೇಶದಲ್ಲಿರುವ ಜೆಸಿಬಿ ಶೋರೂಂನಲ್ಲಿ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಇಬ್ಬರು ಯುವಕರ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.
ಸಾರ್ವಜನಿಕರ ಮನವಿ:
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ವರ್ಷವೂ ಹಲವು ವಾಹನ ಅಪಘಾತಗಳು ಸಂಭವಿಸಿದ್ದು, ಪದೇಪದೇ ಅಪಘಾತಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆದ್ದಾರಿಯಲ್ಲಿ ವಾಹನ ಸವಾರರು ಅತಿವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದನ್ನು ನಿಯಂತ್ರಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಹೆದ್ದಾರಿಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ವಾಹನ ಸವಾರರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕೆಂಬ ಆಗ್ರಹ ಕೇಳಿಬಂದಿದೆ.




