ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಕಾರ್ಯಕ್ರಮ ಡಿ.9ರಂದು ಸಂಜೆ 6 ಗಂಟೆಯಿಂದ ನಡೆಯಲಿದ್ದು, ಸುಮಾರು 40 ವಿಶೇಷ ಚೇತನ ಮಕ್ಕಳೂ ಸೇರಿದಂತೆ 3,500ಕ್ಕೂ ಅಧಿಕ ಮಕ್ಕಳು ಭಾಗವಹಿಸಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಅವರು ತಿಳಿಸಿದ್ದಾರೆ.
ಬಿ.ಸಿ ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಯೋಚನೆಯಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆ ಇಂದು ಅತ್ಯಂತ ಎತ್ತರಕ್ಕೆ ಬೆಳೆದು ನಿಂತಿದೆ. ರಾಷ್ಟ್ರೀಯ ಶಿಕ್ಷಣಕ್ಕೆ ಪೂರಕವಾದ ರೀತಿಯಲ್ಲಿ ಶಿಕ್ಷಣ ನೀಡುತ್ತಿರುವ ಸಂಸ್ಥೆ ಉಳಿದ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರಂಭದಲ್ಲಿ ಹಗಲು ಹೊತ್ತಿನಲ್ಲಿ ನಡೆಯುತ್ತಿದ್ದ ಕ್ರೀಡೋತ್ಸವ ಕಳೆದ 30 ವರ್ಷಗಳಿಂದ ಹೊನಲು ಬೆಳಕಿನಲ್ಲಿ ನಡೆಯುತ್ತಿದ್ದು, ಅ ದಿನ 20 ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ಚಿತ್ರನಟ ಪ್ರಕಾಶ್ ಬೆಳವಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ಮುರುಗೇಶ್ ನಿರಾಣಿ, ಸುರೇಶ್ ಶೆಟ್ಟಿ ಗುರ್ಮೆ, ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಯಶಪಾಲ ಸುವರ್ಣ, ಗುರುರಾಜ ಗಂಟಿಹೊಳೆ, ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಕಿರಣ್ ಕೊಡ್ಗಿ ಸೇರಿದಂತೆ ಹಲವು ಗಣ್ಯರು ಆಗಮಿಸುವರು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ.ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ ಮತ್ತು ಸಹಸಂಚಾಲಕರಾದ ರಮೇಶ್ ಅವರು ಉಪಸ್ಥಿತರಿದ್ದರು.