ಬಂಟ್ವಾಳ: ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ”ಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಐಇಸಿ ಸಂಯೋಜಕ ರಾಜೇಶ್ ಅವರು “ಉದ್ಯೋಗ ಖಾತರಿ ಯೋಜನೆಯಡಿ ಅಡಿಕೆ ಕೃಷಿ, ಎಡೆಸಸಿ, ಮಲ್ಲಿಗೆ, ಪೌಷ್ಟಿಕ ತೋಟ, ತೆರೆದ ಬಾವಿ, ದನದ ಹಟ್ಟಿ, ಕೃಷಿ ಹೊಂಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅ.31ರೊಳಗೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು. ಗ್ರಾಮೀಣ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಕುಟುಂಬಗಳು ಉದ್ಯೋಗ ಚೀಟಿಗೆ ಗ್ರಾಮ ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು”.
ಗ್ರಾಮಗಳಲ್ಲಿ ವಾಹನ ಪ್ರಚಾರ ನಡೆಸಲಾಯಿತು ಹಾಗೂ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರಸಾದ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಹೆಗ್ಡೆ, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.