ನಿಫಾ ವೈರಸ್ ಭೀತಿ: ಕೇರಳದ ಗಡಿ ಪ್ರದೇಶಗಳಲ್ಲಿ ಅಕ್ಟೋಬರ್ ೧೦ರವರೆಗೆ ಕಣ್ಗಾವಲು

Share with

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಭೀತಿ ಹಿನ್ನಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಚಾಮರಾಜನಗರ, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ ೧೦ರವರೆಗೆ ಕಣ್ಗಾವಲು ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರು ಹೇಳಿದ್ದಾರೆ. ಅವರು ನಾಲ್ಕು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಯಾವುದೇ ಶಂಕಿತ ನಿಫಾ ಪ್ರಕರಣಗಳು ಪತ್ತೆಯಾಗಿಲ್ಲ, ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಿದ್ದು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಸರಿಸುಮಾರು 20 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಇದುವರೆಗೆ ೧೦,೦೦೦ಕ್ಕೂ ಹೆಚ್ಚು ಜನರನ್ನು ಜ್ವರ, ಕೆಮ್ಮು ಮತ್ತು ಇತರ ರೋಗಲಕ್ಷಣಗಳಿಗಾಗಿ ತಪಾಸಣೆಯನ್ನು ಮಾಡಲಾಗಿದೆ. ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಏಕಾಏಕಿ ವರದಿಯಾಗಿರುವ ಕೇಂದ್ರದಿಂದ 150 ಕಿ.ಮೀ ವ್ಯಾಪ್ತಿಯ ಗಡಿಯಲ್ಲಿರುವ ಎಚ್‌.ಡಿ ಕೋಟೆ ತಾಲೂಕಿನ ಕುಗ್ರಾಮಗಳು ಮತ್ತು ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *