
ನವದೆಹಲಿ: ಅಯೋಧ್ಯೆಯಲ್ಲಿ ಜ.22 ರಂದು ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಟ, ನಿರ್ದೇಶಕರಾದ ರಿಷಬ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಉಳಿದಂತೆ ಕರ್ನಾಟಕದಿಂದ ಸುಮಾರು 250 ಮಂದಿ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಅದರಲ್ಲಿ ನಟ ರಿಷಬ್ ಶೆಟ್ಟಿ ಕನ್ನಡ ಚಿತ್ರರಂಗದ ಪರವಾಗಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
‘ಕಾಂತಾರ’ ಚಿತ್ರದ ಮೂಲಕ ಸಂಚಲನ ಸೃಷ್ಟಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ರಿಷಬ್ ಶೆಟ್ಟಿ ಅವರನ್ನು ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿಯಾಗಿದ್ದರು. ಇದೀಗ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿರುವುದು ರಿಷಬ್ ಶೆಟ್ಟಿಯವರ ಹೆಗ್ಗಳಿಕೆಯನ್ನು ಹೆಚ್ಚಿಸಿದೆ.




