ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಿಗೆ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯ ನಿಯಮಗಳನ್ನು ಸ್ಕ್ಯಾನಿಂಗ್ ಸಂಸ್ಥೆಗಳು ಸಮರ್ಪಕವಾಗಿ ಪಾಲಿಸುತ್ತಿದೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಚ್. ಆರ್. ತಿಮ್ಮಯ್ಯ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ 1994ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ಗರ್ಭಿಣಿಯರ ಆರೋಗ್ಯದ ಸಮರ್ಪಕ ಮೇಲ್ವಿಚಾರಣೆ ಹಾಗೂ ಅಗತ್ಯ ಆರೋಗ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸಲು ತಾಯಿಕಾರ್ಡ್ ಪ್ರಮುಖ ದಾಖಲೆಯಾಗಿದ್ದು, ಪ್ರತಿಯೊಬ್ಬ ಗರ್ಭಿಣಿಯೂ ತಾಯಿ ಕಾರ್ಡ್ ಅನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಗರ್ಭಿಣಿಯರು ಸ್ಕ್ಯಾನಿಂಗ್ಗಾಗಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ತೆರಳುವ ಸಂದರ್ಭದಲ್ಲಿ ತಾಯಿ ಕಾರ್ಡ್ ಅನ್ನು ತಪ್ಪದೇ ಕೊಂಡೊಯ್ಯಬೇಕು. ತಾಯಿ ಕಾರ್ಡ್ ಇಲ್ಲದೇ ಹೋದಲ್ಲಿ ಸಮೀಪದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಅಥವಾ ಆರೋಗ್ಯ ಕಾರ್ಯಕರ್ತರನ್ನು, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಲಹ ಸಮಿತಿ ಅಧ್ಯಕ್ಷೆ (ಪಿ.ಎನ್.ಡಿ.ಟಿ.) ಡಾ| ಅಮೃತಾ ಭಂಡಾರಿ, ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣ ಸಮಿತಿ ಸದಸ್ಯೆ ಡಾ| ಸುಂದರಿ, ಇತರ ಸದಸ್ಯರು ಉಪಸ್ಥಿತರಿದ್ದರು.




