ರಾಜ್ಯದ 22 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9 ರವರೆಗೆ ಮಳೆ!

Share with

ಬೆಂಗಳೂರು: ಈ ವರ್ಷ ಆರಂಭದಿಂದಲೇ ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದ್ದು, ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ವರ್ಷದ ಆರಂಭದಲ್ಲಿಯೇ ವರುಣಾದೇವನ ಆಗಮನವಾಗಲಿದೆ. ಹೀಗಾಗಿ ರಾಜ್ಯದ 22 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇಂದಿನಿಂದ 5-6 ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7 ರಿಂದ 9 ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡದ ಜೊತೆಗೆ ಗಾಳಿಯ ಅನಿಯಮಿತ ಚಲನೆಯ ಕಾರಣ ಈಗಿನ ಮುಂಗಾರು ಮಳೆಯ ರೀತಿಯ ವಾತಾವರಣ ಉಂಟಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.


Share with

Leave a Reply

Your email address will not be published. Required fields are marked *