ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನ್ನು ಭಾರತೀಯ ಹವಾಮಾನ ಇಲಾಖೆಯು ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಶುಕ್ರವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ.
ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾದರೆ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ದಾವಣಗೆರೆ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದೂ ಮಳೆ: ಇನ್ನು ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜೊತೆಗೆ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 60 ಕಿ.ಮೀವರೆಗೆ ಇರಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಏರಿಕೆಯಾಗಿದ್ದ ಗರಿಷ್ಠ ತಾಪಮಾನವು 36 ಡಿ.ಸೆ.ನಿಂದ ಇದೀಗ 35 ಡಿ.ಸೆಗೆ ಇಳಿಕೆಯಾಗಿದೆ.




